ಪುತ್ತೂರು: ಕಾರು ಹಾಗೂ ಗೂಡ್ಸ್ ವಾಹನದಲ್ಲಿ 106 ಕಿಲೋ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಹಾಗೂ ಅದೇ ಗ್ರಾಮದ ರಫೀಕ್ ಪಿ(37) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಯೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಸದ್ರಿ ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಿದರು.
ಈ ವೇಳೆ ಕಾರನ್ನು ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿ ತುಂಬಿಸಿ ಇದ್ದ ಕಟ್ಟು ಪತ್ತೆಯಾಗಿದೆ. ಬಳಿಕ ಅದರ ಜೊತೆಗೇ ಇದ್ದ ಗೂಡ್ಸ್ ವಾಹನವನ್ನು ಪರಿಶೀಲಿಸಿದಾಗ ಆ ವಾಹನದಲ್ಲಿ 106 ಕಿಲೋ ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ ರೂ.53,03,000/- ಆಗಬಹುದು ಎಂದು ಅಂದಾಜಿಸಲಾಗಿದೆ.

ಪ್ರಕರಣದ ಬಗ್ಗೆ ಚಾಲಕರಲ್ಲಿ ವಿಚಾರಿಸಿದಾಗ ಸದ್ರಿ ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾನೆ. ಸದ್ಯ ಗಾಂಜಾ ಹಾಗೂ ಸಾಗಾಣಿಕೆಗೆ ಬಳಸಿದ ವಾಹನ ಹಾಗೂ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:09/2026, ಕಲಂ: 8(c), 20(b)(ii)C NDPS Act-1985. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ರವರು ಹಾಗೂ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ,ವಿನೋದ್ ರವರುಗಳನ್ನು ಒಳಗೊಂಡ ತಂಡ ಕಾರ್ಯನಿರ್ವಹಿಸಿದ್ದಾರೆ..

