ಮಂಗಳೂರು: ನಗರದ ಮ್ಯಾಪ್ಸ್ ಕಾಲೇಜು ಮತ್ತು ಅಮೃತ ಪ್ರಕಾಶ ಪತ್ರಿಕೆಯ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ಒತ್ತಿ ಹೇಳಿದರು.
ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಿದ್ದ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರದ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಚಂದ್ರಶೇಖರ್ ಹಾಗೂ ವಿಜಯ ಕರ್ನಾಟಕ ದೈನಿಕ ಪತ್ರಿಕೆಯ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಮನ್ವಿತ್ ಶೆಟ್ಟಿ ವಂದನಾರ್ಪಣೆ ಮಾಡಿದರು.