ಪೆರ್ನೆ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ದುರಂತದಲ್ಲಿ ಅಮೂಲ್ಯ ಜೀವ ಕಳೆದುಕೊಂಡ ಬಾಲಕಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಮೃತಳ ತಾಯಿ-ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ದುಃಖದಲ್ಲಿ ಭಾಗಿಯಾದರು. ಈ ಕಠಿಣ ಸಂದರ್ಭದಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಧೈರ್ಯದಿಂದ ಇರಬೇಕೆಂದು ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಮೃತಳ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದರು.
ಇದೇ ವೇಳೆ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇತರ ವಿದ್ಯಾರ್ಥಿಗಳು ಶೀಘ್ರವಾಗಿ ಗುಣಮುಖರಾಗಲೆಂದು ರೈ ಅವರು ಹಾರೈಸಿದರು. ಅಲ್ಲದೆ, ಮುಂಬರುವ ದಿನಗಳಲ್ಲಿ ಇಂತಹ ಘೋರ ದುರ್ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಶಾಲಾ ಆಡಳಿತ ಮಂಡಳಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾದ ತುರ್ತು ಅಗತ್ಯವಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ನಾರಾಯಣ ನಾಯ್ಕ್, ಚಂದ್ರಶೇಖರ್ ಬಂಡಾರಿ, ಬಿ. ಆರ್. ಅಂಚನ್, ಫಾರೂಕ್ ಪೆರ್ನೆ, ಗೀತೆಶ್ ಪೆರ್ನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.