canaratvnews

*ಸಂಘಟನೆಯೇ ಶಕ್ತಿ, ಶಿಸ್ತೇ ಅದರ ಉಸಿರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ*

ಮಂಗಳೂರು, ಮಾರ್ಚ್ 05: ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ‘ಪ್ರಶಿಕ್ಷಣ ವರ್ಗ’ವು ಭದ್ರ ಬುನಾದಿಯಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದರು.

ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026ರ ಭಾಗವಾಗಿ ಇಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಜನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಹೊಸ ವಿಚಾರ ಹಾಗೂ ಆಲೋಚನೆಗಳೊಂದಿಗೆ ನಮ್ಮ ಸಂಘಟನೆಯ ಬುನಾದಿಯನ್ನು ಭದ್ರಪಡಿಸಿಕೊಳ್ಳಬೇಕಿದೆ. ಇಲ್ಲಿ ಪಡೆದ ಜ್ಞಾನವನ್ನು ಕೇವಲ ಸಭೆಗೆ ಸೀಮಿತಗೊಳಿಸದೆ, ನಮ್ಮ ಕ್ಷೇತ್ರಗಳಲ್ಲಿ ಜಾರಿಗೆ ತರಬೇಕು. 2047ರ ಹೊತ್ತಿಗೆ ‘ವಿಕಸಿತ ಭಾರತ’ ನಿರ್ಮಾಣದ ಗುರಿ ತಲುಪಲು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ,” ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಪ್ರಶಿಕ್ಷಣ ಮಹಾಭಿಯಾನದ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯಲ್ಲಿ ಯಾವುದೇ ರಾಜಿ ಇಲ್ಲದೆ ಬದ್ಧತೆಯಿಂದ ಕೆಲಸ ಮಾಡಬೇಕು ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಮಹಾಭಿಯಾನದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್ ಅವರು ಪ್ರಶಿಕ್ಷಣದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್ ಪುತ್ತೂರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು. ಸೀತಾರಾಮ ಬೆಳಾಲು ಸ್ವಾಗತಿಸಿ, ಡಾ. ಮಂಜುಳಾ ರಾವ್ ಕಾರ್ಯಕ್ರಮ ನಿರೂಪಿಸಿದರು. ಅರುಣ್ ಶೇಟ್ ವಂದೇಮಾತರಂ ಹಾಡಿದರು.
Share News
Exit mobile version