ಮಂಗಳೂರು: ಬಿಜೆಪಿ ನಡೆಸಿದ ಸಂಘಟಿತ ಹೋರಾಟದ ಫಲವಾಗಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡುವಂತಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ನಗರದ ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ನಡೆದ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಕಾರ್ಯಕಾರಿಣಿ ಸಭೆ ಮತ್ತು ಬಿ.ಎ.ಎಲ್-2ಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸದನದ ಒಳಗೆ ಹಾಗೂ ಹೊರಗೆ ಪಕ್ಷ ಹಮ್ಮಿಕೊಂಡಿದ್ದ ತೀವ್ರ ಪ್ರತಿಭಟನೆಗಳು ಈ ಯಶಸ್ಸಿಗೆ ಕಾರಣ ಎಂದ ಶಾಸಕರು, ಮೊದಲ ಹಂತದ ಚುನಾವಣಾ ಪ್ರಕ್ರಿಯೆಯಲ್ಲಿ (ಎಸ್ಐಆರ್) ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್ಎ-2 ಹಾಗೂ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದರು. ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಮತ್ತಷ್ಟು ಪರಿಣಾಮಕಾರಿ ಹೋರಾಟಗಳನ್ನು ರೂಪಿಸಬೇಕಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ‘ಪುತ್ತೂರು ಚಲೋ’ ಹಾಗೂ ‘ಬಳ್ಳಾರಿ ಚಲೋ’ ಸೇರಿದಂತೆ ಪಕ್ಷದ ಎಲ್ಲಾ ಹೋರಾಟಗಳಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಮತ್ತು ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿಗಳಾದ ಪೂರ್ಣಿಮಾ, ಸುಜಿತ್ ಪ್ರತಾಪ್, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಹಿರಿಯ ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್ ಸೇರಿದಂತೆ ಮಂಡಲದ ಪದಾಧಿಕಾರಿಗಳು, ನಿಕಟಪೂರ್ವ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
