ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಸಂಬಂಧಿಸಿದಂತೆ ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.

ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮ ಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ. ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜನರು ನದಿ ದಾಟಲು ಹರಸಾಹಸ ಪಡುತ್ತಿದ್ದು, ಸುಸಜ್ಜಿತ ಸೇತುವೆ ನಿರ್ಮಿಸಿಕೊಡುವಂತೆ ಸ್ಥಳೀಯರು ಸಚಿವರಿಗೆ ಮನವಿ ಸಲ್ಲಿಸಿದರು.
ಸ್ಥಳ ಪರಿಶೀಲನೆಯ ನಂತರ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, “ಈ ಭಾಗದ ಜನರ ದಶಕಗಳ ಬೇಡಿಕೆಯ ಬಗ್ಗೆ ಗಮನ ಹರಿಸಲಾಗುವುದು. ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವರದಿ ಹಾಗೂ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರಿಗೆ ಈ ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಹಿತ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಮತ್ತು ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು