ಬೆಂಗಳೂರು: ರಾಜ್ಯ ರಾಜಕಾರಣದ ಮರೆಯದ ನಾಯಕ, ದಾಖಲೆಯ ಬಜೆಟ್ ಮಂಡಿಸಿದ ವೀರ, ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ದೀರ್ಘಕಾಲಿನ ಸಿಎಂ ಎಂಬ ಹೆಗ್ಗಳಿಕೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿ ಸಿಎಂ ಸ್ಥಾನ ತೊರೆಯುವಂತೆ ಸಲಹೆ ನೀಡಿತ್ತು. ಜೊತೆಗೆ ರಾಜ್ಯ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಸಮಯವಕಾಶ ಕೇಳಿದ್ದ ಸಿಎಂ ಇಂದು ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ.
ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವುದು ಬಹುತೇಕ ಖಚಿತವಾಗಿದೆ.

