ಮಂಗಳೂರು: ಅಪ್ರಾಪ್ತೆಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿ ಹಾಗೂ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದೆ.

ಅಪರಾಧಿಯನ್ನು ಸೋನು ಮ್ಯಾಕ್ಲಿನ್ ನೊರೊನ್ಹ (20) ಎಂದು ಗುರುತಿಸಲಾಗಿದೆ.
ಪ್ರಕರಣದ ಹಿನ್ನೆಲೆ
ಸೋನು ಮ್ಯಾಕ್ಲಿನ್ ನೊರೊನ್ಹ ಎಂಬುವವನು 2024ರ ಫೆಬ್ರವರಿಯಿಂದ ಅಪ್ರಾಪ್ತೆಯೊಬ್ಬಳನ್ನು ಪ್ರೀತಿಯ ನೆಪದಲ್ಲಿ ವಿಶ್ವಾಸಕ್ಕೆ ಪಡೆದು, 2025ರ ಜೂನ್‌ವರೆಗೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಜೊತೆಗೆ ಸ್ನಾನದ ವೇಳೆ ವಿಡಿಯೊ ಕರೆ ಮೂಲಕ ನಗ್ನ ಚಿತ್ರಗಳನ್ನು ಸೆರೆಹಿಡಿದು, ದೈಹಿಕ ಸಂಬಂಧ ಮುಂದುವರಿಸದಿದ್ದರೆ ಅವುಗಳನ್ನು ವೈರಲ್ ಮಾಡುವುದಾಗಿ ಹಾಗೂ ಬಾಲಕಿ ಮತ್ತು ಆಕೆಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಹಾಕಿದ್ದನು. ಈ ಬಗ್ಗೆ ನಗರದ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ತನಿಖೆಯನ್ನು ಆಗಿನ ಪೊಲೀಸ್ ನಿರೀಕ್ಷಕ ಟಿ.ಡಿ. ನಾಗರಾಜ್ ನಡೆಸಿದ್ದು, ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
