ಮಂಗಳೂರು:ಮಂಗಳೂರಿನ ಕಂಕನಾಡಿ ವಲೆನ್ಸಿಯಾ ವಾರ್ಡ್ ನಂ. 48ರ ಸುವರ್ಣ ಲೇನ್‌ನಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ರಸ್ತೆ ಕಾಮಗಾರಿ ಆರಂಭಗೊಂಡಿದ್ದರೂ ನಿರೀಕ್ಷಿತ ವೇಗದಲ್ಲಿ ನಡೆಯದೆ, ಕಾಮಗಾರಿ ವಿಳಂಬವಾಗುತ್ತಿ ರುವುದರಿಂದ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ತೊಂದರೆಗಳನ್ನು ಎದುರಿಸುತ್ತಿರುವ ಬಗ್ಗೆ ಐವನ್ ಡಿ’ಸೋಜಾ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಸುವರ್ಣ ಲೇನ್‌ಗೆ ಭೇಟಿ ನೀಡಿ, ಗುತ್ತಿಗೆದಾರರು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕಾಮಗಾರಿಯ ಸ್ಥಿತಿಗತಿಗಳನ್ನು ಖುದ್ದಾಗಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಐವನ್ ಡಿ’ ಸೋಜಾ ಅವರು, ಸಾರ್ವಜನಿಕರಿಗೆ ತೊಂದರೆಯಾ ಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಮತ್ತಷ್ಟು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಕಾಮಗಾರಿಯ ಗುಣಮಟ್ಟದಲ್ಲಿಯೂ ಯಾವುದೇ ರಾಜಿ ಮಾಡಿಕೊಳ್ಳದೆ, ನಿಗದಿತ ಮಾನದಂಡಗಳಂತೆ ಕಾಮಗಾರಿ ಪೂರ್ಣಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆಯ ಸಂಬಂಧ ಪಟ್ಟ ಇಂಜಿನಿಯರ್‌ಗಳು ಕಾಮಗಾರಿಯ ಮೇಲೆ ನಿರಂತರ ನಿಗಾ ವಹಿಸಿ, ಸ್ಥಳೀಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ರಸ್ತೆ ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೆತ್ತಿಕೊಳ್ಳಲಾಗಿರು ವ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುವು ದರಿಂದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟಾಗುತ್ತದೆ. ಆದ್ದರಿಂದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿ ರ್ವಹಿಸಿ, ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಐವನ್ ಡಿ’ಸೋಜಾ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಭಾಸ್ಕರ್ ರಾವ್, ಯುವ ಕಾಂಗ್ರೆಸ್ ನಾಯಕರಾದ ಕ್ಲೈವ್ ಫೆರ್ನಾಂಡಿಸ್, ಗುತ್ತಿಗೆದಾರ ಇಕ್ಬಾಲ್, ವಿರಾಯ್ ಲೋಬೋ, ವಿಜಯ್ ಲೋಬೋ, ಜೆರಾಲ್ಡ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
