LATEST NEWS

ಪರಿಣಾಮಕಾರಿ ಕಾರ್ಯನಿರ್ವಹಣೆಗೆ ತರಬೇತಿ ಅಗತ್ಯ _ಡಾ. ಗಣನಾಥ ಶೆಟ್ಟಿ ಎಕ್ಕಾರು

ಮಂಗಳೂರು: “ಶಾಲಾ-ಕಾಲೇಜುಗಳಲ್ಲಿ ಕಾನೂನಾತ್ಮಕವಾಗಿ ರಚನೆಯಾಗಿರುವ ಯುವ ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕಾರ್ಯಕ್ರಮ ಅಧಿಕಾರಿಗಳ ಮೇಲೆ ಮಹತ್ವದ ಜವಾಬ್ದಾರಿ ಇದೆ. ಯುವ ರೆಡ್‌ಕ್ರಾಸ್‌ನ ಧ್ಯೇಯೋದ್ದೇಶಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಂತಹ ತರಬೇತಿಗಳು ನೆರವಾಗುತ್ತವೆ” ಎಂದು ಯುವ ರೆಡ್‌ಕ್ರಾಸ್ ರಾಜ್ಯ ಸಂಯೋಜಕ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಸಹಯೋಗದಲ್ಲಿ ಬುಧವಾರ ನಡೆದ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮವು ಮಂಗಳೂರಿನ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಸಿಎ ಶಾಂತಾರಾಮ್ ಶೆಟ್ಟಿ ಮಾತನಾಡಿ, ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯು ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್‌ನ ಬಲವರ್ಧನೆಗಾಗಿ ಹಲವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಜಿಲ್ಲಾ ರೆಡ್‌ಕ್ರಾಸ್‌ನ ಆಡಳಿತ ಮಂಡಳಿ ಸದಸ್ಯ ಪಿ.ಬಿ. ಹರೀಶ್ ರೈ, ಯುವ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ. ಸುಮನಾ ಬೋಳಾರ್ ಹಾಗೂ ಯೇನೆಪೊಯ ವಿ.ವಿ. ಯುವ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ. ನಿತ್ಯಶ್ರೀ ಬಿ.ವಿ. ಉಪಸ್ಥಿತರಿದ್ದರು.

ಮಂಗಳೂರು ವಿ.ವಿ. ಯುವ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್. ಸ್ವಾಗತಿಸಿದರು. ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ ವಂದಿಸಿದರು. ಮಿಲಾಗ್ರಿಸ್ ಕಾಲೇಜಿನ ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಸುಶ್ಮಿತಾ ಶೈಲಾ ಮೊರಾಸ್ ಕಾರ್ಯಕ್ರಮ ನಿರೂಪಿಸಿದರು.

Share News