DAKSHINA KANNADAHOMELATEST NEWS

ಜನಜೀವನ ಬದಲಿಸಿದ ಪಂಚ ಗ್ಯಾರಂಟಿಗಳು ದೇಶಕ್ಕೆ ಮಾದರಿ: ಸಚಿವ ಯು.ಟಿ. ಖಾದರ್ ಶ್ಲಾಘನೆ

ಮಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಮತ್ತು ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳು ಆರಂಭದಲ್ಲಿ ಅನೇಕ ಟೀಕೆಗಳಿಗೆ ಒಳಗಾಗಿದ್ದರೂ, ಇಂದು ದೇಶಕ್ಕೆ ಮಾದರಿಯಾದ ಯಶಸ್ವಿ ಜನಪರ ಯೋಜನೆಗಳಾಗಿ ಹೊರಹೊಮ್ಮಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಪ್ರತಿಪಾದಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಂಟಿ ಆಶ್ರಯದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ‘ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ’ವನ್ನು ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಟೀಕೆಗಳಿಗೆ ಸಿಕ್ಕಿದೆ ಸೂಕ್ತ ಉತ್ತರ:

ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬ ನಾನಾ ರಾಜಕೀಯ ಟೀಕೆಗಳು ಕೇಳಿಬಂದಿದ್ದವು. ಆದರೆ, ಇಂದು ನಮ್ಮ ಸಮರ್ಪಕ ಹಾಗೂ ಬಲಿಷ್ಠ ಆಡಳಿತ ವ್ಯವಸ್ಥೆಯಿಂದಾಗಿ ಇವೆಲ್ಲವೂ ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ಬಂದಿವೆ. ಇದು ಕೇವಲ ಚುನಾವಣಾ ಕಾಲದ ಭರವಸೆಯಲ್ಲ, ಬದಲಾಗಿ ಜನರ ಬದುಕಿನಲ್ಲಿ ನೈಜ ಬದಲಾವಣೆ ತಂದಿರುವುದನ್ನು ದಾಖಲೆಗಳ ಸಮೇತ ಸಾಬೀತುಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸ್ವಾಭಿಮಾನಿ ಬದುಕಿಗೆ ಆಸರೆ:

ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರ ನೀಡುತ್ತಿರುವ ಅನುದಾನವನ್ನು ತಳಮಟ್ಟದ ಫಲಾನುಭವಿಗಳು ಅತ್ಯಂತ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಮಾಜದಲ್ಲಿ ಆತ್ಮವಿಶ್ವಾಸ ಹಾಗೂ ಸ್ವಾಭಿಮಾನದ ಗೌರವಯುತ ಬದುಕು ಸಾಗಿಸಲು ಈ ಯೋಜನೆಗಳು ದಾರಿದೀಪವಾಗಿವೆ. ಫಲಾನುಭವಿಗಳು ಆರ್ಥಿಕವಾಗಿ ಸಬಲರಾಗುವ ಮೂಲಕ ದೇಶದ ಆರ್ಥಿಕ ಶಕ್ತಿಯ ಪ್ರಮುಖ ಭಾಗವಾಗುತ್ತಿದ್ದಾರೆ ಎಂದು ಅವರು ಬಣ್ಣಿಸಿದರು.

ಸಂಜೀವಿನಿ ಮಾಸಿಕ ಸಂತೆ’ ಉದ್ಘಾಟನೆ:

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಮುಂಚಿತವಾಗಿ ಹೆಚ್.ಎಂ. ರೇವಣ್ಣ ಅವರು ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾದ ‘ಸಂಜೀವಿನಿ ಮಾಸಿಕ ಸಂತೆ’ಯನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕ ಐವನ್ ಡಿಸೋಜಾ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ. ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ (CEO) ನರ್ವಾಡೆ ವಿನಾಯಕ ಕಾರ್ಭಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಪ್ರಮುಖ ಸದಸ್ಯರಾದ ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಶಾಹುಲ್ ಹಮೀದ್, ರಫೀಕ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸುರೇಂದ್ರ ಕಂಬಳಿ ಅವರು ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ತಾಲೂಕು ಪಂಚಾಯತ್ ಆಡಳಿತ ಅಧಿಕಾರಿ ಶಕುಂತಲಾ ಶೆಣೈ ಅವರು ಎಲ್ಲರನ್ನೂ ಸ್ವಾಗತಿಸಿದರು. ಗ್ರಾಮೀಣ ಉದ್ಯೋಗ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹೇಶ್ ಅಂಬೆಕಲ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸವಲತ್ತುಗಳನ್ನು ಪಡೆದುಕೊಂಡರು.

Share News