ಮಂಗಳೂರು: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕರಾವಳಿ ಭಾಗದ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ನ 30ರಂದು ಬೆ.9ರಿಂದ ಮಂಗಳೂರು ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ಅವರಣದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಸುಮಾರು 200ಕ್ಕೂ ಹೆಚ್ಚಿನ ಉದ್ಯೋಗದಾತರು ಹಾಗೂ 10,000ಕ್ಕೂ ಹೆಚ್ಚಿನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ:
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಲ್ಪಟ್ಟ 10,089 ಅಭ್ಯರ್ಥಿಗಳು, ಜಿಲ್ಲೆಯ ಯುವನಿಧಿ ಯೋಜನೆಯಡಿ ನೋಂದಾಯಿಸಿದ 8,708 ಫಲಾನುಭವಿಗಳು, ‘ಯುವ ಉದ್ಯೋಗ ಸೇತು’ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡವರು ಹಾಗೂ ಜಿಲ್ಲೆಯ ಇತರೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 17 ಇಂಜಿನಿಯರಿಂಗ್ ಕಾಲೇಜುಗಳು, 11 ಪಾಲಿಟೆಕ್ನಿಕ್ ಕಾಲೇಜುಗಳು, 25 ಸರ್ಕಾರಿ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ITI), 115 ಪದವಿ ಕಾಲೇಜುಗಳು, 210 ಪದವಿ ಪೂರ್ವ ಕಾಲೇಜುಗಳು ಹಾಗೂ 611 ಪ್ರೌಢಶಾಲೆಗಳಿಂದ ಪ್ರತಿ ವರ್ಷ ಸರಿಸುಮಾರು 65,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಹೊರಬರುತ್ತಿದ್ದು, ಅವರೆಲ್ಲರಿಗೂ ಈ ಮೇಳವು ಉತ್ತಮ ವೇದಿಕೆಯಾಗಲಿದೆ. ದಕ್ಷಿಣ ಕನ್ನಡ ಮಾತ್ರವಲ್ಲದೆ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಿಂದಲೂ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಬೃಹತ್ ಉದ್ಯೋಗ ಮೇಳವನ್ನು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಶಿವಕಾಂತಮ್ಮ (ಕಾಂತ) ನಾಯಕ, ಸ್ಥಳೀಯ ಲೋಕಸಭಾ ಸದಸ್ಯರು, ಜಿಲ್ಲೆಯ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ.

ಮೇಳದಲ್ಲಿ ಭಾಗವಹಿಸುವ ಎಲ್ಲಾ ಉದ್ಯೋಗಾ ಕಾಂಕ್ಷಿಗಳಿಗೆ ಉಚಿತ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದರು.
