ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು ಮಹತ್ವದ ಪುಸ್ತಕಗಳ ಪರಿಷ್ಕೃತ ಮುದ್ರಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಬೆಂಗಳೂರಿನ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ನಡೆದ ಕೃತಿ ಬಿಡುಗಡೆ ಸಮಾರಂಭದಲ್ಲಿ, ಇಂಗ್ಲಿಷ್ ಭಾಷಿಕರಿಗಾಗಿ ಕೆ.ಟಿ. ಗಟ್ಟಿ ಅವರು ರಚಿಸಿರುವ ‘ಲರ್ನ್ ತುಳು ನ್ಯಾಚುರಲಿ’ ಹಾಗೂ ಕನ್ನಡ ಭಾಷಿಕರಿಗಾಗಿ ಡಾ. ಯು.ಪಿ. ಉಪಾಧ್ಯಾಯ ಸಿದ್ಧಪಡಿಸಿರುವ ‘ತುಳು ಕೈಪಿಡಿ’ ಪುಸ್ತಕಗಳ ಪರಿಷ್ಕೃತ ಆವೃತ್ತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ತುಳು ಕಲಿಕೆಯ ಪುಸ್ತಕಗಳಿಗೆ ಭಾರಿ ಬೇಡಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಕಾಡೆಮಿಯು ಈ ಪುಸ್ತಕಗಳನ್ನು ಮರುಮುದ್ರಣ ಮಾಡಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಸಚಿವರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಡಾ. ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಮಂಜುಶ್ರೀ ಎನ್., ಇಲಾಖೆಯ ನಿರ್ದೇಶಕಿ ಡಾ. ಕೆ.ಎಂ. ವಸುಂಧರ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಹಾಗೂ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಮತ್ತಿತರರು ಉಪಸ್ಥಿತರಿದ್ದರು.
