LATEST NEWS

ಖರ್ಗೆ ಅವಮಾನ ಪ್ರಕರಣ: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡನೀಯ: ದಿನೇಶ್ ಮುಳೂರು

ಮಂಗಳೂರು: ಸೆ 02 : ಕಾಂಗ್ರೆಸ್ ಅಧ್ಯಕ್ಷ ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಬದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಹೇಳಿದರು.


ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 10ರಂದು ಉತ್ತರ ಪ್ರದೇಶದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದರು. ಬಳಿಕ ಆಗಸ್ಟ್ 11ರಂದು ಅದೇ ಸ್ಥಳದಲ್ಲಿ ಹೋಮ-ಹವನ ನಡೆಸಿ ಶುದ್ಧೀಕರಣ ಮಾಡಲಾಗಿದೆ. ಇದು ಜಾತಿ ತಾರತಮ್ಯ ಹಾಗೂ ಖರ್ಗೆ ಅವರಿಗೆ ಮಾಡಿದ ಅವಮಾನವಾಗಿದೆ ಎಂದು ಆರೋಪಿಸಿದರು.

ಈ ಘಟನೆಯನ್ನು ಖಂಡಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ, ಇದಕ್ಕೆ ಪ್ರತಿಯಾಗಿ ಬಿಜೆಪಿ ಹಾಗೂ ಸಂಘ ಪರಿವಾರದವರು ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ದಲಿತ ಸಮುದಾಯದ ಬಗ್ಗೆ ಅವರ ನಿಲುವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಖರ್ಗೆ ಅವರಿಗೆ ಅವಮಾನ ಮಾಡಿದ ಆರೋಪದ ಕುರಿತು ಎಫ್‌ಐಆರ್ ದಾಖಲಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಈ ದೇಶದ ಸಮಸ್ತ ದಲಿತ ಸಮುದಾಯದ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನಂತೆ ಕಾಣುತ್ತಿದೆ ಎಂದು ದಿನೇಶ್ ಮುಳೂರು ಹೇಳಿದರು.

ರಾಹುಲ್ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯ ಕುಟುಂಬದಿಂದ ಬಂದವರು. ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡಿದರೆ, ಯುವಕರಿಗೆ ಮತದಾನದ ಹಕ್ಕು ದೊರಕಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಲಾಯಿತು ಎಂದು ಅವರು ಹೇಳಿದರು.
ಇಂದಿರಾ ಗಾಂಧಿ ಅವರ ಆಡಳಿತಾವಧಿಯಲ್ಲಿ ದಲಿತರು ಮತ್ತು ಶೋಷಿತ ವರ್ಗಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಶಿಕ್ಷಣ, ಉದ್ಯೋಗ ಸೇರಿದಂತೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿತ್ತು. ದೇವದಾಸಿ ಪದ್ಧತಿ, ಮಲ ಹೊರುವ ಪದ್ಧತಿ ಸೇರಿದಂತೆ ಸಮಾಜದಲ್ಲಿದ್ದ ಹಲವು ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಕಾನೂನು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ದಿನೇಶ್ ಮುಳೂರು ವಿವರಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಬಳಿಕವೂ ದಲಿತರ ಅಭಿವೃದ್ಧಿ ಹಾಗೂ ಸಾಮಾಜಿಕ ಸಮಾನತೆಗಾಗಿ ಕಾಂಗ್ರೆಸ್ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆದರೆ, ಇಂದಿಗೂ ಸಂವಿಧಾನದ ಆಶಯಗಳನ್ನು ವಿರೋಧಿಸುವ ಮನುವಾದಿ ಮನೋಭಾವಗಳು ಮುಂದುವರಿದಿವೆ ಎಂದು ಆರೋಪಿಸಿದರು.
ಉನ್ನಾವೋ ಪ್ರಕರಣದ ಸಂದರ್ಭದಲ್ಲಿ ದಲಿತರು ಹಾಗೂ ಶೋಷಿತರ ಪರವಾಗಿ ರಾಹುಲ್ ಗಾಂಧಿ ಧ್ವನಿ ಎತ್ತಿದ್ದರು. ಇಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನವಾಗಿದೆ ಎಂದು ಆರೋಪಿಸಲಾಗುತ್ತಿರುವ ಸಂದರ್ಭದಲ್ಲಿ ಕೂಡ ದಲಿತರ ಪರವಾಗಿ ರಾಹುಲ್ ಗಾಂಧಿ ನಿಂತಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ದಲಿತರು ಮತ್ತು ಶೋಷಿತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು.
ದೇಶದ ದಲಿತರು ಹಾಗೂ ಶೋಷಿತ ವರ್ಗದ ಜನರು ರಾಹುಲ್ ಗಾಂಧಿ ಅವರೊಂದಿಗೆ ನಿಲ್ಲಲಿದ್ದಾರೆ ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ನೀಡುತ್ತೇವೆ ಎಂದು ದಿನೇಶ್ ಮುಳೂರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಸಫಾಯಿ ಕರ್ಮಚಾರಿ ಘಟಕದ ಜಿಲ್ಲಾಧ್ಯಕ್ಷರಾದ ಪ್ರೇಮ್ ನಾಥ್ ಪಿ.ಬಿ ಬಳ್ಳಾಲ್ ಬಾಗ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರು ಟಿ. ಹೊನ್ನಯ್ಯ, ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಕಾರ್ಯದರ್ಶಿ ರವಿ ಸುಂಕದಕಟ್ಟೆ ಉಪಸ್ಥಿತರಿದ್ದರು.

Share News