ಮಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಹೆಮ್ಮೆಯ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ಅಧ್ಯಕ್ಷ ಅಕ್ಷಿತ್ ಸುವರ್ಣ ಅವರು ಆತ್ಮೀಯವಾಗಿ ಸ್ವಾಗತಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಎಂ.ಆರ್. ಪೂವಮ್ಮ ಅವರಿಗೆ ಪುಷ್ಪಗುಚ್ಛ ನೀಡಿ ಸನ್ಮಾನಿಸಲಾಯಿತು. ಪೂವಮ್ಮ ಅವರ ಕ್ರೀಡಾ ಸಾಧನೆ, ನಿರಂತರ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವವನ್ನು ಅಕ್ಷಿತ್ ಸುವರ್ಣ ಅವರು ಮುಕ್ತಕಂಠದಿಂದ ಶ್ಲಾಘಿಸಿದರು.

ಹೆಚ್.ಡಿ. ಕುಮಾರಸ್ವಾಮಿ ಅವರ ಬೆಂಬಲ:
ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಅವರ ಮುಂದಿನ ಕ್ರೀಡಾ ಜೀವನಕ್ಕೆ ಶುಭ ಹಾರೈಸಿದ್ದಾರೆ ಎಂದು ಅಕ್ಷಿತ್ ಸುವರ್ಣ ಈ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯ ಸರ್ಕಾರದಿಂದ ಸೂಕ್ತ ಗೌರವಧನ ನೀಡಲು ಅಕ್ಷಿತ್ ಸುವರ್ಣ ಸರ್ಕಾರಕ್ಕೆ ಆಗ್ರಹ:
ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡಿರುವ ಎಂ.ಆರ್. ಪೂವಮ್ಮ ಅವರಂತಹ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರವು ಸೂಕ್ತ ಗೌರವಧನ ಹಾಗೂ ಅಗತ್ಯ ಪ್ರೋತ್ಸಾಹ ನೀಡಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. “ಕ್ರೀಡಾಪಟುಗಳು ತಮ್ಮ ಜೀವನದ ಅಮೂಲ್ಯ ಸಮಯವನ್ನು ದೇಶದ ಕೀರ್ತಿಗಾಗಿ ಮೀಸಲಿಟ್ಟು ಕಠಿಣ ಪರಿಶ್ರಮ ಪಡುತ್ತಾರೆ. ಇಂತಹ ಸಾಧಕರನ್ನು ಗುರುತಿಸಿ ಆರ್ಥಿಕವಾಗಿ ಬೆಂಬಲಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದು ಮುಂದಿನ ಪೀಳಿಗೆಯ ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೇರಣೆ ನೀಡಲಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪದಾಧಿಕಾರಿಗಳಾದ ಆದರ್ಶ ಪೂಜಾರಿ, ನಿಶಾಂತ್, ಸುಶಾಂತ್, ವಿನಿತ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
