LATEST NEWS

ಮಂಗಳೂರಿನಲ್ಲಿ ಯುವಕರು, ವಿದ್ಯಾರ್ಥಿ ಗಳೇ ಟಾರ್ಗೆಟ್: ಬೃಹತ್ ಡ್ರಗ್ ಜಾಲ ಭೇದಿಸಿದ ಉತ್ತರ ಠಾಣೆ ಪೊಲೀಸರು

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ MDMA ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ ನಸೀಮಾ @ ನಸೀಮ (42) ಬಂಧಿತ ಆರೋಪಿತೆಯಾಗಿದ್ದಾಳೆ.

ಪ್ರಕರಣದ ಹಿನ್ನೆಲೆ:
ದಿನಾಂಕ 01-11-2026 ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಬೆನ್ನು ಬಿದ್ದಿದ್ದರು. ಈ ವೇಳೆ ನಸೀಮಾ ಎಂಬಾಕೆ ಮಾದಕ ವಸ್ತು ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.

ಅಪಾರ್ಟ್‌ಮೆಂಟ್ ಮೇಲೆ ದಾಳಿ – ಲಕ್ಷಾಂತರ ಮೌಲ್ಯದ ಡ್ರಗ್ಸ್ ಜಪ್ತಿ:
ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿತೆ ನಸೀಮಾ ವಾಸವಿದ್ದ ಪಂಪ್‌ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಒಂದನೇ ಮಹಡಿಯ ಫ್ಲ್ಯಾಟ್ ನಂಬ್ರ 103 ರ ಮೇಲೆ ದಾಳಿ ನಡೆಸಿ ಶೋಧ ನಡೆಸಿದರು. ಈ ವೇಳೆ ಫ್ಲ್ಯಾಟ್‌ನಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ ಸುಮಾರು 15,30,000 ರೂ. (ಹದಿನೈದು ಲಕ್ಷದ ಮೂವತ್ತು ಸಾವಿರ) ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳೇ ಟಾರ್ಗೆಟ್!
ಬಂಧಿತ ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಈ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವುದು ಪ್ರಾಥಮಿಕ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ. ದಸ್ತಗಿರಿ ಮಾಡಲಾದ ಆರೋಪಿತೆಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಈ ಬೃಹತ್ ಡ್ರಗ್ಸ್ ಜಾಲದಲ್ಲಿ ಇನ್ನು ಕೆಲವು ಆರೋಪಿಗಳು ಭಾಗಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಂಟಿಯಾಗಿ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share News