DAKSHINA KANNADALATEST NEWS

ಮಾಧ್ಯಮದ ಮೌಲ್ಯ ಕಾಪಾಡುವುದು ಪತ್ರಕರ್ತರ ಕರ್ತವ್ಯ: ಆಳ್ವಾಸ್ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ

ಮಂಗಳೂರು: ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಹಿಂದೆ ಇದ್ದ ಮೌಲ್ಯಗಳು ಮತ್ತು ಪಾವಿತ್ರ್ಯತೆ ಕುಸಿಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ತನ್ನ ನೈತಿಕ ಜವಾಬ್ದಾರಿಯನ್ನು ಮರೆಯಬಾರದು. ಮಾಧ್ಯಮದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಆದ್ಯ ಕರ್ತವ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅವರು ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲನೆಗೊಳಿಸಿ ಅವರು ಮಾತನಾಡಿದರು.

ಪತ್ರಿಕಾ ಧರ್ಮದಿಂದ ಮಾತ್ರ ಸಮಾಜ ಸುಧಾರಣೆ

ಪತ್ರಿಕಾ ಮಾಧ್ಯಮವು ಸಮಾಜದ ತಪ್ಪುಗಳನ್ನು ಎತ್ತಿತೋರಿಸುವುದರ ಜತೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯನ್ನು ತಿದ್ದುವ ಮಹತ್ವದ ಜವಾಬ್ದಾರಿಯನ್ನು ಹೊಂದಿದೆ. ಪತ್ರಿಕಾ ಧರ್ಮದ ಪ್ರಾಮಾಣಿಕ ಪಾಲನೆಯಿಂದ ಮಾತ್ರ ಸಮಾಜದ ಸುಧಾರಣೆ ಸಾಧ್ಯ ಎಂದು ಡಾ. ಮೋಹನ್ ಆಳ್ವ ಅಭಿಪ್ರಾಯಪಟ್ಟರು.

ನಗರಾಭಿವೃದ್ಧಿಗೆ ಮಾಧ್ಯಮದ ಕೊಡುಗೆ ಅಪಾರ: ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್

ನವೀಕೃತ ಅಕ್ಷರ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, “ಮಂಗಳೂರು ನಗರದ ಒಟ್ಟಾರೆ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಮಹತ್ವದ್ದಾಗಿದೆ. ರಸ್ತೆಗಳ ದುಸ್ಥಿತಿ, ಸಾರ್ವಜನಿಕ ಸಮಸ್ಯೆಗಳನ್ನು ತೆರೆದಿಡುವ ಮಾಧ್ಯಮಗಳ ಜನಪರ ವರದಿಗಾರಿಕೆಯಿಂದಾಗಿ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತಿದೆ. ನಾಡಿನ ಅಭಿವೃದ್ಧಿಯಲ್ಲಿ ಪತ್ರಕರ್ತರು ಇನ್ನಷ್ಟು ಸಕ್ರಿಯ ಪಾತ್ರವಹಿಸಬೇಕು” ಎಂದರು.

ನಗರ ಯೋಜನೆಯ ನಿಯಮಗಳ ಬಗ್ಗೆ ಎಚ್ಚರಿಕೆ ಅಗತ್ಯ

ನಗರದಲ್ಲಿ ಕಟ್ಟಡ ನಿರ್ಮಾಣ ನಿಯಮಗಳು, ಸೆಟ್‌ಬ್ಯಾಕ್ ಮತ್ತು ರಸ್ತೆ ಅಗಲೀಕರಣದಂತಹ ವಿಚಾರಗಳ ಬಗ್ಗೆ ಸಮರ್ಪಕ ಅರಿವಿಲ್ಲದೆ ಆಡಳಿತ ವ್ಯವಸ್ಥೆ ನಿರ್ಧಾರ ಕೈಗೊಂಡರೆ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳು ಎದುರಾಗಬಹುದು. ನಗರ ಯೋಜನೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳಲ್ಲಿ ಮಾಧ್ಯಮಗಳು ನಿರಂತರ ಗಮನ ಹರಿಸಿ ಜನತೆಯನ್ನು ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಕೃಷ್ಣ ಜೆ. ಪಾಲೆಮಾರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಗಳೂರು ಪ್ರೆಸ್‌ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ಅವರ ನಾಮಫಲಕವನ್ನು ಅನಾವರಣಗೊಳಿಸಲಾಯಿತು. ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಮತ್ತು ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಭಾಗವಹಿಸಿದ್ದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಬಿ.ರವೀಂದ್ರ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಪ್ರೆಸ್‌ಕ್ಲಬ್‌ನ ಉಪಾಧ್ಯಕ್ಷ ಮುಹಮ್ಮದ್ ಅರಿಫ್ ಪಡುಬಿದ್ರಿ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಸತೀಶ್ ಇರಾ ಪ್ರಾರ್ಥನೆ ನೆರವೇರಿಸಿದರೆ, ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು.

Share News