ಉಡುಪಿ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ದುರಾಡಳಿತದಿಂದ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಸಂಕಷ್ಟಕ್ಕೆ ತಳ್ಳಿತು. ಈ ದುರ್ಘಟನೆಯಿಂದ ಉಂಟಾದ ಮಾನಸಿಕ ಆಘಾತದ ಪರಿಣಾಮವಾಗಿ 21 ಅಮಾಯಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಅನ್ಯಾಯದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿ, ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಅನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರು ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುವ ಮೂಲಕ ದೇಶದ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದರು.
ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟಕ್ಕೆ ಬೆಂಬಲ ನೀಡಿದ್ದಕ್ಕಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು “ರಾಹುಲ್ ಗಾಂಧಿ 24 ಗಂಟೆಗಳ ಕಾಲ ಡ್ರಗ್ಸ್ ನಶೆಯಲ್ಲಿರುತ್ತಾರೆ” ಎಂಬ ನಿರಾಧಾರ ಹಾಗೂ ಅವಹೇಳನಕಾರಿ ಆರೋಪ ಮಾಡಿರುವುದು ಮಾತ್ರವಲ್ಲದೆ, “ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ” ಎಂದು ಬಹಿರಂಗವಾಗಿ ಬೆದರಿಕೆಯ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ. ಈ ಭಾಷಣದ ವಿಡಿಯೋ ಸಾಕ್ಷ್ಯವೂ ಲಭ್ಯವಿದ್ದು, ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ, ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಇತರ ಬಿಜೆಪಿ ಶಾಸಕರು ಉಪಸ್ಥಿತರಿದ್ದರೂ ಇಂತಹ ದ್ವೇಷಪೂರಿತ ಹಾಗೂ ಬೆದರಿಕೆ ಒಡ್ಡುವ ಹೇಳಿಕೆಯನ್ನು ಖಂಡಿಸದೆ ಮೌನ ವಹಿಸಿರುವುದು ಸಹ ಅಷ್ಟೇ ಖಂಡನೀಯ. ಜನಪ್ರತಿನಿಧಿಗಳ ಈ ಮೌನವನ್ನು ಪರೋಕ್ಷ ಬೆಂಬಲವೆಂದೇ ಸಾರ್ವಜನಿಕರು ಅರ್ಥೈಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಾದ ನೈತಿಕ ಹೊಣೆಗಾರಿಕೆ ಹೊಂದಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದ ನೀಟ್ ಹಗರಣದ ವಿರುದ್ಧ ಧ್ವನಿ ಎತ್ತಿದವರನ್ನೇ ಗುರಿಯಾಗಿಸಿಕೊಂಡು ವೈಯಕ್ತಿಕ ನಿಂದನೆ, ದ್ವೇಷದ ಭಾಷೆ ಹಾಗೂ ಬೆದರಿಕೆಯ ರಾಜಕಾರಣ ನಡೆಸುತ್ತಿರುವುದು ಬಿಜೆಪಿಯ ಶಿಕ್ಷಣ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಮನೋಭಾವವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಆದರೆ ಭಿನ್ನಾಭಿಪ್ರಾಯವನ್ನು ಎದುರಿಸಲು ಅವಹೇಳನ, ದ್ವೇಷದ ಭಾಷೆ ಮತ್ತು ಜೀವ ಬೆದರಿಕೆಯ ಮಾರ್ಗವನ್ನು ಆಯ್ಕೆ ಮಾಡುವುದು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ.
ಸಂವಿಧಾನಕ್ಕೆ ಪ್ರಮಾಣವಚನ ಸ್ವೀಕರಿಸಿರುವ ಜನಪ್ರತಿನಿಧಿಯೊಬ್ಬರು ಇಂತಹ ಭಾಷೆಯನ್ನು ಬಳಸುವುದು ಅವರ ಹುದ್ದೆಯ ಘನತೆಗೆ ತಕ್ಕದ್ದಲ್ಲ. ಇಂತಹ ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಹೇಳಿಕೆಗಳು ಕರಾವಳಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಅಪಾಯವನ್ನು ಹೊಂದಿವೆ. ಆದ್ದರಿಂದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಈ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ರಾಜ್ಯ ಗೃಹ ಸಚಿವರೊಂದಿಗೆ ತುರ್ತಾಗಿ ಚರ್ಚೆ ನಡೆಸಲಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಪ್ರಕರಣದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವದ ಆಧಾರದಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ತಪ್ಪಿತಸ್ಥರ ವಿರುದ್ಧ ನ್ಯಾಯಸಮ್ಮತ ಹಾಗೂ ಕಠಿಣ ಕ್ರಮ ಜರುಗಲಿದೆ ಎಂಬ ವಿಶ್ವಾಸವನ್ನು ಅವರು ಪತ್ರಿಕಾ ಹೇಳಿಕೆಯಲ್ಲಿ ವ್ಯಕ್ತಪಡಿಸಿದ್ದಾರೆ.

