ಮಂಗಳೂರು,.ಮಾ.04: ಕಡಬ ತಾಲೂಕು ಕೊೈಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಶ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.
ಅವರು ಮಂಗಳವಾರ ಕೊೈಲ ಪಶುವೈದ್ಯಕೀಯ ಕಾಲೇಜು ಹಾಗೂ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಕಾಲೇಜು, ಹಾಸ್ಟೆಲ್ ಕಟ್ಟಡ, ಪ್ರಯೋಗಾಲಯ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳು ಈಗಾಗಲೇ ಪೂರ್ಣಗೊಂಡಿದೆ. 13 ಉಪನ್ಯಾಸಕರ ಹುದ್ದೆ, 32 ಇತರೆ ಸಿಬ್ಬಂದಿ ಹುದ್ದೆಗಳು ಮಂಜೂರುಗೊಳಿಸಲಾಗಿದೆ. ಕಾಲೇಜಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ (ವಿ.ಸಿ.ಐ) ಅನುಮತಿ ದೊರಕುವುದು ಬಾಕಿ ಇದ್ದು, ಶೀಘ್ರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಜಾನುವಾರು ಸಂವರ್ಧನಾ ತರಬೇತಿ ಕೇಂದ್ರದಲ್ಲಿ ಅಪರೂಪದ ಜಾನುವಾರು ತಳಿಗಳನ್ನು ಬೆಳೆಸಲು ಹೆಚ್ಚು ಆದ್ಯತೆ ನೀಡಬೇಕು. ಜಾನುವಾರು ಮತ್ತು ಕುಕ್ಕುಟಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಹೆಚ್ಚಿಸಬೇಕು. ಹೊಸ ಹೊಸ ತಳಿಗಳನ್ನು ಪರಿಚಯಿಸಬೇಕು ಎಂದು ಸಚಿವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಕಾಣಿಕೆ ಸಂಖ್ಯೆಯು ಕುಸಿಯುತ್ತಿರುವುದರಿಂದ ಹೈನುಗಾರಿಕೆಯನ್ನು ಪೆÇ್ರೀತ್ಸಾಹಿಸಲು ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವಿವಿಧೆಡೆ ಮಂಜೂರುಗೊಂಡಿರುವ ಪಶುವೈದ್ಯಕೀಯ ಆಸ್ಪತ್ರೆಗಳಿಗೆ ಜಮೀನು ಲಭ್ಯವಿಲ್ಲದಿದ್ದಲ್ಲಿ ಅದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸಚಿವರು ತಿಳಿಸಿದರು.
ಜಾನುವಾರು ವಿಮೆಗಳ ಕ್ಲೈಮ್ ಸಂದರ್ಭದಲ್ಲಿ ವಿಮಾ ಕಂಪನಿಗಳು ರೈತರಿಗೆ ಸ್ಪಂದಿಸುವುದಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ, ಕೇಂದ್ರ ಕಚೇರಿಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದರು.
ಪುತ್ತೂರಿಗೆ ಪಶುಸಂಗೋಪನೆ ಪಾಲಿ ಕ್ಲಿನಿಕ್ ಮಂಜೂರಾಗಿದ್ದು, ಶೀಘ್ರದಲ್ಲಿಯೇ ವಿವಿಧ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವಂತೆ ಸಚಿವ ವೆಂಕಟೇಶ್ ತಿಳಿಸಿದರು.
ಕೊೈಲ ಜಾನುವಾರು ಸಂವರ್ಧನಾ ಕೇಂದ್ರವು 1951 ರಲ್ಲಿ ಸ್ಥಾಪನೆಯಾಗಿದೆ. ಇಲ್ಲಿನ 247 ಎಕರೆ ಜಮೀನನ್ನು ಪಶುವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಹಾಗೂ 98 ಎಕರೆ ಜಮೀನನ್ನು ಜಿಲ್ಲಾ ಗೋಶಾಲೆ ನಿರ್ಮಾಣಕ್ಕೆ ನೀಡಲಾಗಿದೆ. ಜಿಲ್ಲಾ ಗೋಶಾಲೆಗೆ ರಾಜ್ಯ ಸರಕಾರದಿಂದ ಈವರೆಗೆ ರೂ.1.91 ಕೋಟಿ ಅನುದಾನ ಬಂದಿದೆ. ಪ್ರಸ್ತುತ ಈ ಗೋಶಾಲೆಯಲ್ಲಿ 154 ಜಾನುವಾರುಗಳು ಇವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಸಭೆಗೆ ಇಲಾಖಾ ಮಾಹಿತಿ ನೀಡಿದರು. ಜಾನುವಾರ ತಳಿ ಸಂವರ್ಧನ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕ ಡಾ.ಚಿದಾನಂದ ಸ್ವಾಗತಿಸಿದರು.
ಇದಕ್ಕೂ ಮೊದಲು ಸಚಿವರು ಪಶು ವೈದ್ಯಕೀಯ ಕಾಲೇಜು ಕಟ್ಟಡ, ಜಿಲ್ಲಾ ಗೋಶಾಲೆ, ಹಾಗೂ ಜಾನುವಾರು ಸಂವರ್ಧನ ತರಬೇತಿ ಕೇಂದ್ರದ ವಿವಿಧ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.