ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜನರ ದಶಕಗಳ ಬೇಡಿಕೆಯಾದ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಅನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಬೆಂಗಳೂರಿನಲ್ಲಿ ಆಡಳಿತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಹರೇಕೊಪ್ಪ ತಿಮ್ಮನಗೌಡ ನರೇಂದ್ರ ಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ ಅವರು, “ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಜಿಲ್ಲೆಗಳ ಜನರು ನ್ಯಾಯಾಂಗ ಪ್ರಕ್ರಿಯೆಗಳಿಗಾಗಿ ಬೆಂಗಳೂರಿಗೆ ನೂರಾರು ಕಿಲೋಮೀಟರ್ ಪ್ರಯಾಣ ಮಾಡಬೇಕಿದೆ. ಇದು ಕೇವಲ ಸಮಯದ ವ್ಯಯವಷ್ಟೇ ಅಲ್ಲದೆ, ಬಡ ಮತ್ತು ಸಾಮಾನ್ಯ ಜನರಿಗೆ ಆರ್ಥಿಕ ಹೊರೆಯಾಗುತ್ತಿದೆ. ಮಂಗಳೂರಿನಲ್ಲಿ ಸರ್ಕ್ಯೂಟ್ ಬೆಂಚ್ ಸ್ಥಾಪನೆಯಾದಲ್ಲಿ ಕರಾವಳಿ ಭಾಗದ ಜನರಿಗೆ ಸುಲಭವಾಗಿ ಮತ್ತು ತ್ವರಿತವಾಗಿ ನ್ಯಾಯ ಸಿಗಲು ಸಹಕಾರಿಯಾಗಲಿದೆ” ಎಂದು ತಿಳಿಸಿದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪೂರಕವಾದ ಮೂಲಸೌಕರ್ಯಗಳು ಲಭ್ಯವಿರುವ ಬಗ್ಗೆಯೂ ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳ ಗಮನ ಸೆಳೆಯಲಾಯಿತು. ಜನರ ಸಂಕಷ್ಟವನ್ನು ಅರಿತು ಶೀಘ್ರವಾಗಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಅವರು ವಿನಂತಿಸಿದರು.

