ಮಂಗಳೂರು: ನೈತಿಕ ಪೊಲೀಸ್‌ಗಿರಿಯಲ್ಲಿ ಸೈಲೆಂಟ್ ಆಗಿದ್ದ ಮಂಗಳೂರಿನಲ್ಲಿ ಇದೀಗ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ.
ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂಬುವವರು ವಿದ್ಯಾರ್ಥಿಗಳ ವಿಡಿಯೋ ಮಾಡಲಾರಂಭಿಸಿದ್ದಾರೆ. ಈ ವೇಳೆ ಸ್ಥಳದಿಂದ ಬಾಲಕಿ ತೆರಳಿದ್ದಾಳೆ. ನಂತರ ಬಾಲಕನಿಗೆ ಹಲ್ಲೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವಿದ್ಯಾರ್ಥಿಗಳಿಗೆ ಅಡ್ಡಗಟ್ಟಿದ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬಾಲಕನ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೇವಲ ಹಲ್ಲೆಯಷ್ಟೇ ಅಲ್ಲದೆ, ವಿದ್ಯಾರ್ಥಿಗಳ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ವಿದ್ಯಾರ್ಥಿಗಳ ಮಾನಹಾನಿಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು, ಅಪ್ರಾಪ್ತ ವಿದ್ಯಾರ್ಥಿಗಳ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.

