ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಸಭೆ ನಡೆಸಿ, ಜನರ ಅಹವಾಲುಗಳನ್ನು ಆಲಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸ್ಥಳೀಯ ಮೂಲಸೌಕರ್ಯ ಸಮಸ್ಯೆಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು, ರೈಲ್ವೆ ಅಭಿವೃದ್ಧಿ ಯೋಜನೆಗಳು ಸೇರಿದಂತೆ ಹಲವು ಸಾರ್ವಜನಿಕ ಬೇಡಿಕೆಗಳ ಕುರಿತು ಸಂಸದರಿಗೆ ಮನವಿ ಸಲ್ಲಿಸಿದರು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿದ ಸಂಸದರು, ಈ ಕುರಿತು ಪರಿಶೀಲಿಸಿ ಶೀಘ್ರ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ನಿರ್ದೇಶನ ನೀಡಿದರು.

ರೈಲ್ವೆ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ:
ಇದೇ ಸಂದರ್ಭದಲ್ಲಿ, ಜಿಲ್ಲೆಯ ರೈಲ್ವೆ ಸಂಪರ್ಕ ಸುಧಾರಣೆಗೆ ಸಂಸದರು ನಡೆಸುತ್ತಿರುವ ನಿರಂತರ ಪ್ರಯತ್ನಗಳನ್ನು ಶ್ಲಾಘಿಸಿ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಕ್ಯಾ. ಬ್ರಿಜೇಶ್ ಚೌಟ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ಪ್ರಮುಖವಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಲೋಕಾರ್ಪಣೆ, ಸುಬ್ರಹ್ಮಣ್ಯ – ಸಕಲೇಶಪುರ ಘಾಟ್ ವಿಭಾಗದ ವಿದ್ಯುದೀಕರಣ ಕಾಮಗಾರಿ, ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಅಭಿವೃದ್ಧಿ ಹಾಗೂ ಮಂಗಳೂರು – ಬೆಂಗಳೂರು ರೈಲು ಮಾರ್ಗದ ದ್ವಿಪಥೀಕರಣಕ್ಕಾಗಿ ಸಂಸದರು ತೋರುತ್ತಿರುವ ವಿಶೇಷ ಮುತುವರ್ಜಿಗೆ ಪ್ರತಿನಿಧಿಗಳು ಕೃತಜ್ಞತೆ ಸಲ್ಲಿಸಿದರು.







