LATEST NEWS

ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಪ್ರತಿಷ್ಠಿತ ‘ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ’ ಪ್ರದಾನ

ಬೆಂಗಳೂರು ಆಗಸ್ಟ್ 11: ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಮಂಗಳೂರಿನ ‘ಅಮೃತ ಪ್ರಕಾಶ’ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರು ಹಾಗೂ ಹೆಸರಾಂತ ಸಾಹಿತಿಯಾದ ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಪ್ರತಿಷ್ಠಿತ ‘ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಸ್ಮರಣಾರ್ಥ ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಚಾಮರಾಜ ಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭವು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಅತ್ಯಂತ ವೈಭವದಿಂದ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರಿನ ಪೊಲೀಸ್ ಮಹಾ ನಿರೀಕ್ಷಕರಾದ (IPS) ಜೆ.ಕೆ. ರಶ್ಮಿ ಅವರು ನೆರವೇರಿಸಿದರು. ತದನಂತರ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಅವರು ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕೆಂಪೇಗೌಡ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಶರವಣ ಹಾಗೂ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಕನ್ನಡ ಪರ ಸಂಘಟನೆಯ ಒಕ್ಕೂಟದ ಅಧ್ಯಕ್ಷರಾದ ಎಂ. ತಿಮ್ಮಯ್ಯ ಅವರು ಉಪಸ್ಥಿತರಿದ್ದು ಸಾಧಕರನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಎಸ್.ಆರ್. ವಿಜಯ ಸಮರ್ಥ್ ಅವರು ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ ಭಾರತಿ ಅವರು ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಿರೂಪಿಸಿದರು. ಸಮಾರಂಭದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಹಲವು ಗಣ್ಯಾತಿಗಣ್ಯರು ಭಾಗವಹಿಸಿದ್ದರು.

Share News