ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀ ಝಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಸ್ಯಾಂಡಲ್ವುಡ್ ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ ಕೇಳಿಬಂದಿದೆ. ಈ ಸಂಬಂಧ ಎನ್ಎಸ್ಯುಐ (NSUI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅಧಿಕೃತ ದೂರು ಸಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಸಮಗ್ರ ತನಿಖೆಗೆ ಸುಹಾನ್ ಆಳ್ವ ಆಗ್ರಹ:
ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ನಿಯೋಗವು ನಟನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿತು. ಈ ವೇಳೆ ಮಾತನಾಡಿದ ಮುಖಂಡರು, ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರ ವಿರುದ್ಧ ನಟ ಧನ್ವೀರ್ ಅವರು ನೀಡಿರುವ ಹೇಳಿಕೆಗಳ ಕುರಿತು ಪೊಲೀಸ್ ಇಲಾಖೆಯು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ನಿಯೋಗದಲ್ಲಿ ಪೊಲೀಸ್ ಆಯುಕ್ತರಿಗೆ ದೂರು ನೀಡುವ ಸಂದರ್ಭದಲ್ಲಿ ಎನ್ಎಸ್ಯುಐ ಜಿಲ್ಲಾ ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ ಹಾಗೂ ಪ್ರಮುಖ ಮುಖಂಡರಾದ ಕೌಶಿಕ್, ಸುಶಾನ್ ಮತ್ತು ಏತಾನ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
