ಸುಳ್ಯ : 2022ರಲ್ಲಿ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಆರೋಪಿಯನ್ನು ಉಮ್ಮರ್ ಫಾರೂಕ್ ಎಂ.ಆರ್. ಎಂದು ಗುರುತಿಸಲಾಗಿದ್ದು, ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕೇರಳದ ಕೊಚ್ಚಿಯಲ್ಲಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ (RCN) ಮತ್ತು ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು.
ಆತನ ಬಂಧನಕ್ಕೆ ಕಾರಣವಾಗುವ ಸುಳಿವು ನೀಡಿದವರಿಗೆ ತನಿಖಾ ಸಂಸ್ಥೆಯು 4 ಲಕ್ಷ ರೂ. ಬಹುಮಾನವನ್ನೂ ಘೋಷಿಸಿತ್ತು.ಈ ಕೊಲೆಯ ಹಿಂದಿನ ಪಿತೂರಿಗೆ ಸಂಬಂಧಿಸಿದಂತೆ ಎನ್‌ಐಎ ಈ ಹಿಂದೆ ಉಮ್ಮರ್ ಫಾರೂಕ್ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯ (UAPA) ವಿವಿಧ ನಿಬಂಧನೆಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿತ್ತು. ಈತ ಸುಳ್ಯ ಪಟ್ಟಣದಲ್ಲಿದ್ದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಚೇರಿಯಲ್ಲಿ ಇತರ ಆರೋಪಿಗಳೊಂದಿಗೆ ಪಿತೂರಿ ಸಭೆಯಲ್ಲಿ ಭಾಗವಹಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
