ಮಂಗಳೂರು,ಜ.31 :-ಜನಸಾಮಾನ್ಯರಿಗೆ ನ್ಯಾಯವನ್ನು ಒದಗಿಸುವುದಕ್ಕಾಗಿ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ಸಾಂವಿಧಾನಿಕವಾಗಿರುತ್ತದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಹೇಳಿದ್ದಾರೆ. ಅವರು ಶನಿವಾರ ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.
ಪುತ್ತೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಒಟ್ಟು 12 ನ್ಯಾಯಾಲಯ ಸಭಾಂಗಣಗಳಿವೆ. ಆಧುನಿಕ ಶೈಲಿಯಲ್ಲಿ ಕಟ್ಟಡ ನಿರ್ಮಾಣ ಮಾಡಿರುವುದು ಶ್ಲಾಘನೀಯ. ನ್ಯಾಯಾಲಯವು ಸಾಂವಿಧಾನಿಕ ಆಡಳಿತದ ಸಂಕೇತವಾಗಿದೆ ಎಂದು ಹೇಳಿದರು.
ಮಂಗಳೂರಿನಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಕಟ್ಟಡ ಬ್ಲಾಕ್ ನಿರ್ಮಿಸಲು ಅನುಮೋದಿಸಲಾಗಿದೆ. ಬೆಳ್ತಂಗಡಿಯಲ್ಲಿ 9 ಕೋಟಿ ರೂ. ಹೊಸ ನ್ಯಾಯಾಲಯ ಕಟ್ಟಡಕ್ಕೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪುತ್ತೂರು ನ್ಯಾಯಾಲಯ ಸಂಕೀರ್ಣಕ್ಕೆ ಎಲ್ಲಾ ಮೂಲ ಸೌಕರ್ಯ ಒದಗಿಸಲು ಸರಕಾರ ನೆರವು ನೀಡಲಿದೆ. ಪುತ್ತೂರು ಜಿಲ್ಲಾ ನ್ಯಾಯಾಲಯದ ವ್ಯಾಪ್ತಿಗೆ ಬೆಳ್ತಂಗಡಿ ತಾಲೂಕನ್ನು ಸೇರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ ಸ್ವಾಗತಿಸಿದರು.