DAKSHINA KANNADALATEST NEWSSTATE

ಮಂಗಳೂರು-ಬೆಂಗಳೂರು ನಡುವಿನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಚಾಲನೆ; ಹಸಿರು ನಿಶಾನೆ ತೋರಿದ ಸಚಿವ ಅಶ್ವಿನಿ ವೈಷ್ಣವ್

ಮಂಗಳೂರು: ಕರಾವಳಿ ನಗರಿ ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಸಂಚರಿಸಲಿರುವ ಮೊತ್ತ ಮೊದಲ ವಂದೇ ಭಾರತ್ ಹೈಸ್ಪೀಡ್ ರೈಲು ಸೇವೆಗೆ ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದರು.

ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಅತ್ತ ಪ್ರಧಾನಿಯವರು ಚಾಲನೆ ನೀಡುತ್ತಿದ್ದಂತೆಯೇ, ಇತ್ತ ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಹಸಿರು ನಿಶಾನೆ ತೋರುವ ಮೂಲಕ ರೈಲಿನ ಬೆಂಗಳೂರು ಪ್ರಯಾಣಕ್ಕೆ ಅಧಿಕೃತ ಚಾಲನೆ ನೀಡಿದರು.

ಪ್ರಯಾಣಿಕರಿಗೆ ಆಧುನಿಕ ಮತ್ತು ವೇಗದ ಸೇವೆ:

ಸ್ಮಾರ್ಟ್ ಸಿಟಿ ಮಂಗಳೂರನ್ನು ರಾಜಧಾನಿ ಬೆಂಗಳೂರಿಗೆ ಸಂಪರ್ಕಿಸುವ ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ಎರಡು ನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸಲಿದೆ. ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಆರಾಮದಾಯಕ ಹಾಗೂ ವೇಗದ ಪ್ರಯಾಣದ ಅನುಭವವನ್ನು ಈ ರೈಲು ನೀಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿದ್ದರು. ಅಲ್ಲದೆ ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ, ಡಾ. ಭರತ್ ಶೆಟ್ಟಿ, ಕಿಶೋರ್ ಕುಮಾರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share News