ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಮಾನು ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ವಿವರ:
2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತ ಬಾಲಕಿಯನ್ನು ಆರೋಪಿ ತನ್ನ ಬೈಕ್‌ನಲ್ಲಿ ಕುಳ್ಳಿರಿಸಿ ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಕರೆದುಕೊಂಡು ಅಲ್ಲಿನ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಮತ್ತು ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆಯನ್ನೂ ಹಾಕಿದ್ದ.
ಘಟನೆಗೆ ಸಂಬಂಧಿಸಿದಂತೆ ದಿನಾಂಕ 23-07-2025ರಂದು ದೂರು ದಾಖಲಿಸಿಕೊಂಡ ಮೂಲ್ಕಿ ಪೊಲೀಸರು, ಆರೋಪಿಯನ್ನು ಅದೇ ದಿನ ಬಂಧಿಸಿದ್ದರು. ನೊಂದ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಆಕೆ ಗರ್ಭಿಣಿ ಎಂದು ಗೊತ್ತಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಂಗಳೂರಿನ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು.
ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ, ನೊಂದ ಬಾಲಕಿ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಿತ್ತು. ಪ್ರಾಸಿಕ್ಯೂಷನ್ ಪರವಾಗಿ ಎಂಟು ಮಂದಿಯನ್ನು ಸಾಕ್ಷಿ ವಿಚಾರಣೆ ನಡೆಸಿದ್ದು, 26 ದಾಖಲೆಗಳನ್ನು ಹಾಗೂ ಒಂದು ಮೊಬೈಲ್‌ನ್ನು ನಿಶಾನೆಯಾಗಿ ಗುರುತಿಸಲಾಯಿತು.
ಆರೋಪಿಯ ಪರವಾಗಿ ಮಂಗಳೂರಿನ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ವಾದಿಸಿದ್ದರು.