LATEST NEWS

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿ

ಮಂಗಳೂರು: ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಆಯೋಜಿಸಿರುವ ‘9ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ–2026’ ಹಾಗೂ ‘ಕೇರಳ–ಕರ್ನಾಟಕ ಸಾಹಿತ್ಯ ಉತ್ಸವ’ದ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ಆಯ್ಕೆಯಾಗಿದ್ದಾರೆ.

ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಪ್ರತಿಷ್ಠಾನವು ಈ ಗೌರವ ನೀಡುತ್ತಿದೆ. ಈಗಾಗಲೇ ಬಸವಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಅಂಚನ್ ಅವರ ಕ್ರೀಡಾ ಪತ್ರಿಕೋದ್ಯಮದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

36 ವರ್ಷಗಳ ಕ್ರೀಡಾ ಬರವಣಿಗೆಯ ಸಾಧನೆ:

ಎಸ್. ಜಗದೀಶ್ಚಂದ್ರ ಅಂಚನ್ ಅವರು ಕಳೆದ 36 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮ ಮತ್ತು ಅಂಕಣ ಬರವಣಿಗೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಈ ಅವಧಿಯಲ್ಲಿ ಜಿಲ್ಲೆ, ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ವಿವಿಧ ದಿನಪತ್ರಿಕೆ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳಲ್ಲಿ ಇವರ 4,500ಕ್ಕೂ ಹೆಚ್ಚು ಕ್ರೀಡಾ ಲೇಖನಗಳು ಪ್ರಕಟಗೊಂಡಿವೆ. ಕ್ರೀಡಾ ಕ್ಷೇತ್ರದ ವಿವಿಧ ಆಯಾಮಗಳನ್ನು ವಿಶ್ಲೇಷಿಸುವ ಇವರ ವಿಮರ್ಶಾತ್ಮಕ ಬರಹಗಳು ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿವೆ.

ಪ್ರಶಸ್ತಿ ಪ್ರದಾನ ಸಮಾರಂಭ:

ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ ಕನ್ನಡ ಸಮ್ಮೇಳನ ನಡೆಯಲಿದ್ದು, ನವೆಂಬರ್ 29ರಂದು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

Share News