ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಸುರಕ್ಷತೆಗಾಗಿ ತುರ್ತು ಆದೇಶಗಳನ್ನು ಹೊರಡಿಸಿದೆ.


ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ (PUC) ಕಾಲೇಜುಗಳಿಗೆ (12ನೇ ತರಗತಿಯವರೆಗೆ) ದಿನಾಂಕ: 08.07.2026 ರಂದು ರಜೆ ಘೋಷಿಸಲಾಗಿದೆ. ಈ ಆದೇಶ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು.
ಪೋಷಕರಿಗೆ ಎಚ್ಚರಿಕೆ: ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಕಡ್ಡಾಯವಾಗಿ ಜಾಗ್ರತೆ ವಹಿಸಬೇಕು.
ಪ್ರವಾಸಿಗರು ಮತ್ತು ಮೀನುಗಾರರಿಗೆ ನಿರ್ಬಂಧ: ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಅಧಿಕಾರಿಗಳಿಗೆ ಕಡ್ಡಾಯ ನಿಯೋಜನೆ: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಿ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
ಕಾಳಜಿ ಕೇಂದ್ರಗಳ ಸ್ಥಾಪನೆ: ಪ್ರತಿಯೊಂದು ತಾಲ್ಲೂಕುಗಳಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಕಾಳಜಿ ಕೇಂದ್ರಗಳನ್ನು (Care Centres) ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಲು ಆದೇಶಿಸಲಾಗಿದೆ.


