ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದಲ್ಲಿ ಕಳಪೆ ಮತ್ತು ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ವಿಶೇಷ ಸಿಬಿಐ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿನ ನಿರ್ದೇಶನ ಜಾರಿಗೊಳಿಸುವಂತೆ ಕೋರಿದ್ದ ಅರ್ಜಿಯ ಸಂಬಂಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಸಿಬಿಐ ಚೆನ್ನೈನ ವಿಶೇಷ ತನಿಖಾ ದಳಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯವು 16.06.2023ರಂದು ಹೊರಡಿಸಿದ್ದ ತೀರ್ಪಿನಲ್ಲಿನ ನಿರ್ದೇಶನ ಜಾರಿಗೊಳಿಸಲು ಸಿಬಿಐಗೆ ನಿರ್ದೇಶಿಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠ ಅರ್ಜಿದಾರರ ಪರ ವಕೀಲ ಎಂ ಆರ್ ಬಾಲಕೃಷ್ಣ ಅವರು “ಸಿಬಿಐ ಅಡಿ ಖುಲಾಸೆ ಸಮಿತಿ ಇದೆಯೇ ಎಂಬುದಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದರು.
ಇದನ್ನು ಆಲಿಸಿದ ಪೀಠವು ಗೃಹ ಇಲಾಖೆ, ಪೊಲೀಸ್ ಮಹಾನಿರ್ದೇಶಕ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಪಶ್ಚಿಮ ವಿಭಾಗದ ಪೊಲೀಸ್ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ ದೆಹಲಿ ಮತ್ತು ಚೆನ್ನೈ ವಿಭಾಗದ ವಿಶೇಷ ತನಿಖಾ ದಳಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಫೆಬ್ರವರಿ 23ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:
ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ. ಆರೋಪಿ ಸಂತೋಷ ರಾವ್ ಅವರನ್ನು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿ ತಕ್ಷಣ 11 ವರ್ಷಗಳಿಂದ ಜೈಲಿನಲ್ಲಿದ್ದ ಸಂತೋಷ್ ರಾವ್‌ನನ್ನು ಬಿಡುಗಡೆ ಮಾಡುವಂತೆ ನಿರ್ದೇಶಿಸಿತ್ತು.
ಅಲ್ಲದೇ, ಕಳಪೆ ಮತ್ತು ದೋಷಪೂರಿತ ತನಿಖೆ ನಡೆಸಿರುವ ಮತ್ತು ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಈ ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ನಿರ್ದೇಶಿಸಿತು. ಇದೇ ವೇಳೆ ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷಿಯು ವಿಫಲವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.