ಮಂಗಳೂರು, ಸೆ.04: ಮನುಕುಲದ ನೆಮ್ಮದಿ ಮತ್ತು ಉದ್ಧಾರಕ್ಕಾಗಿ ಭಗವಾನ್ ಶ್ರೀ ಕೃಷ್ಣ ನೀಡಿದ ಸಂದೇಶವು ಜಗತ್ತಿಗೆ ಸಾರ್ವಕಾಲಿಕವಾಗಿ ಅಗತ್ಯವಿದ್ದು, ಇದನ್ನು ಸದಾ ಪಾಲಿಸಲು ಪಣತೊಡಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶ್ರೀ ಕೃಷ್ಣ ಒಂದು ಸಮುದಾಯಕ್ಕೆ ಸೀಮಿತ ವಾದವರಲ್ಲ. ಕೃಷ್ಣನ ಚಿಂತನೆಗಳು ಸಮಾಜದ ಎಲ್ಲ ವರ್ಗಗಳಿಗೂ ಪ್ರಸ್ತುತವಾಗಿದೆ. ಸತ್ಯ, ನ್ಯಾಯಕ್ಕೆ ಸದಾ ನಿಷ್ಟುರವಾಗಿದ್ದ ಕೃಷ್ಣ ಸಂದೇಶಗಳು, ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಯಿತು ಎಂದು ಅವರು ಹೇಳಿದರು.
ಕರಾವಳಿಯ ಎಲ್ಲಡೆ ನಡೆಯುತ್ತಿರುವ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳು, ಪ್ರತೀ ಮನೆಯಲ್ಲೂ ಬೆಳಗುತ್ತಿವೆ. ಮುಂದಿನ ದಿನಗಳಲ್ಲಿ ರಾಜ್ಯ ಸರಕಾರದ ವತಿಯಿಂದ ನಡೆಯುವ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಇನ್ನಷ್ಟು ಅದ್ದೂರಿಯಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿವಿಧ ಸಂಘ ಸಂಸ್ಥೆಗಳ ಪಾಲುದಾರಿಕೆಯೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಶ್ರೀಕೃಷ್ಣ ಜಯಂತಿಗೆ ಮೆರುಗು ತರಬೇಕು ಎಂದು ಶಾಸಕ ಕಾಮತ್ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮಿರೆಡ್ಡಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ದ.ಕ. ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘದ ಅಧ್ಯಕ್ಷ ಟಿ.ಆರ್. ಕುಮಾರಸ್ವಾಮಿ, ಕಾರ್ಯದರ್ಶಿ ಸದಾನಂದ ಕಾವೂರು ಮತ್ತಿತರರು ಉಪಸ್ಥಿತರಿದ್ದರು.
ಮೂಡಬಿದ್ರೆ ಆಳ್ವಾಸ್ ಕಾಲೇಜು ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ. ವಿನಾಯಕ ಭಟ್ಟ ಗಾಳಿಮನೆ ಅವರು ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು.
