ಮಂಗಳೂರು, ಸೆ.05 : ವ್ಯಕ್ತಿಯು ಉನ್ನತ ಸ್ಥಾನಕ್ಕೇರಲು ತಂದೆ-ತಾಯಿಗಳ ಜೊತೆಗೆ ಶಿಕ್ಷಕರ ಪಾತ್ರವೂ ಅಪಾರವಾಗಿದೆ. ಭವ್ಯ ಭಾರತದ ಶಿಲ್ಪಿಗಳನ್ನು ಹಾಗೂ ಭವಿಷ್ಯದ ಜವಾಬ್ದಾರಿಯುತ ಪ್ರಜೆಗಳನ್ನು ರೂಪಿಸುವ ಮಹತ್ತರ ಶಕ್ತಿ ಶಿಕ್ಷಕರು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಕರ ಕಲ್ಯಾಣ ನಿಧಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಉತ್ತರವಲಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಮಂಗಳೂರು ಉತ್ತರ ವಲಯದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ಶಿಕ್ಷಕರು ಕೂಡ ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ತಮ್ಮ ಶೈಕ್ಷಣಿಕ ಅರ್ಹತೆಯ ಜೊತೆಗೆ ಕಂಪ್ಯೂಟರ್, ಕೃತಕ ಬುದ್ಧಿಮತ್ತೆ ಹೊಸ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.
ಶಿಕ್ಷಕರು ತಮ್ಮಲ್ಲಿರುವ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ಅವರ ಜ್ಞಾನಾರ್ಜನೆಗೆ ನೆರವಾಗುವುದಲ್ಲದೆ, ವ್ಯಕ್ತಿತ್ವವನ್ನು ರೂಪಿಸಿ ಅವರನ್ನು ದೇಶದ ಅಮೂಲ್ಯ ಸಂಪತ್ತಾಗಿ ಬೆಳೆಸುವ ಕಾರ್ಯ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದರ ಜೊತೆಗೆ ತರಗತಿಗಳಿಗ ತರಗತಿಗಳಿಗೆ ಅಷ್ಟೇ ಸೀಮಿತವಾಗದೆ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸ ಬೇಕು ಎಂದರು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿದ್ದು, ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗಿದೆ. ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಶಾಸಕ ಐವನ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕರ್ನಾಟಕ ಗೇರು ಅಭಿವೃದ್ದಿ ಮಂಡಳಿ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಪ್ರೊಬೇಶನರಿ ಐ.ಎ.ಎಸ್ ಅಧಿಕಾರಿ ಅರ್ಚಿತ್ ಡೊಂಗ್ರೆ ಮತ್ತಿತ್ತರರು ಇದ್ದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಎಸ್ ಶಶಿಧರ್ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ನಿರೂಪಿಸಿದರು.
