ಮಂಗಳೂರು, ನ.6: ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಆಧುನಿಕ ತಂತ್ರಜ್ಞಾನದ ಕುರಿತು ಇರುವ ಅರಿವಿನ ಕೊರತೆಯೇ ಸೈಬರ್ ಅಪರಾಧಗಳು ಹೆಚ್ಚಾಗಲು ಪ್ರಮುಖ ಕಾರಣ ಎಂದು ಸೈಬರ್ ಸುರಕ್ಷತಾ ತಜ್ಞರಾದ ಡಾ. ಅನಂತ ಪ್ರಭು ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾಧ್ಯಮ ಸಂವಾದ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತ್ತಿದ್ದರು.
ವೈಯಕ್ತಿಕ ಮಾಹಿತಿ ಸೋರಿಕೆಯ ಅಪಾಯ:
ಕಂಪ್ಯೂಟರ್, ಇಂಟರ್ನೆಟ್, ಮೊಬೈಲ್ ಸೇರಿದಂತೆ ಕೃತಕ ಬುದ್ಧಿಮತ್ತೆಯ (AI) ಆಧುನಿಕ ತಂತ್ರಜ್ಞಾನದ ಸಲಕರಣೆಗಳನ್ನು ಹೊಂದಿರುವವರು ಅವುಗಳನ್ನು ಬಳಸುವ ಸಂದರ್ಭದಲ್ಲಿ ಸೂಕ್ತ ಮಾಹಿತಿ ಮತ್ತು ಜಾಗೃತೆ ಹೊಂದಿರಬೇಕಾದ ಅಗತ್ಯವಿದೆ. ಇಲ್ಲದಿದ್ದಲ್ಲಿ ಆ ಸಾಧನಗಳ ಮೂಲಕ ನಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಿ, ನಾವು ದೊಡ್ಡ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಇಂತಹ ವಂಚನೆಗಳಿಂದ ಪಾರಾಗಲು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಪ್ರತಿಯೊಬ್ಬರೂ ಸಾಕಷ್ಟು ಜ್ಞಾನ ಹೊಂದಿರಬೇಕು ಎಂದು ಅವರು ತಿಳಿಸಿ, ವಿವಿಧ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮಾಧ್ಯಮ ಸಂವಾದ ಗೋಷ್ಠಿಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಗೋಷ್ಠಿಯ ನಿರ್ದೇಶಕ ಕಿರಣ್ ಸಿರ್ಸಿಕರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹರೀಶ್ ಆದೂರು ಸ್ವಾಗತಿಸಿದರು, ಕೋಶಾಧಿಕಾರಿ ವಿಜಯ ಕೋಟ್ಯಾನ್ ವಂದಿಸಿದರು.
