LATEST NEWS

ಸೌಜನ್ಯ ಹೋರಾಟವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ; ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಿ: ಧರ್ಮಸ್ಥಳ ಗ್ರಾಮಸ್ಥರ ಆಗ್ರಹ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಹೋರಾಟವನ್ನು ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದು, ಪ್ರಕರಣದ ದಿಕ್ಕನ್ನು ಬೇರೆ ಆಯಾಮಗಳಿಗೆ ತೆಗೆದುಕೊಂಡು ಹೋಗುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಧರ್ಮಸ್ಥಳದ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಗ್ರಾಮಸ್ಥರ ವತಿಯಿಂದ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಥಳೀಯ ನಿವಾಸಿ ಶ್ರೀನಿವಾಸ್ ರಾವ್ ಅವರು, “ಸೌಜನ್ಯ ಕೊಲೆಯನ್ನು ಯಾರೇ ಮಾಡಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದರಲ್ಲಿ ನಾವು ಈಗಲೂ ಸ್ಪಷ್ಟವಾಗಿದ್ದೇವೆ. ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನಮಗಿದೆ. ಆದರೆ, ಈ ನ್ಯಾಯದ ಹೋರಾಟವನ್ನು ಮುಂದಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರ ಹಾಗೂ ಗ್ರಾಮಸ್ಥರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ,” ಎಂದು ಕಿಡಿಕಾರಿದರು.ಅಸಹಜ ಸಾವುಗಳ ಅಂಕಿಅಂಶಗಳ ಬಗ್ಗೆ ಸ್ಪಷ್ಟನೆ:2000ರಿಂದ 2014ರವರೆಗೆ ಧರ್ಮಸ್ಥಳದಲ್ಲಿ 1,510 ಅಸಹಜ ಸಾವುಗಳು (UDR) ಸಂಭವಿಸಿವೆ ಎಂಬ ಆರೋಪವನ್ನು ಗ್ರಾಮಸ್ಥರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಈ ಕುರಿತು ಮಾತನಾಡಿದ ಶ್ರೀನಿವಾಸ್ ರಾವ್, “1,510 ಯುಡಿಆರ್ ಆಗಿದೆ ಎಂಬ ಕಥೆಯನ್ನು ಕಟ್ಟಿ, ಇವೆಲ್ಲವೂ ಧರ್ಮಸ್ಥಳದಲ್ಲೇ ನಡೆದಿವೆ ಎಂದು ಬಿಂಬಿಸಲಾಗುತ್ತಿದೆ. ಆದರೆ, ಇಲಾಖೆ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ 14 ವರ್ಷಗಳಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಸಂಭವಿಸಿರುವುದು 374 ಅಸಹಜ ಸಾವುಗಳು ಮಾತ್ರ. ಇದಕ್ಕೆ ನಮ್ಮ ಬಳಿ ಸ್ಪಷ್ಟ ದಾಖಲೆಗಳಿವೆ,” ಎಂದು ತಿಳಿಸಿದರು.ಮಹಿಳಾ ಆಯೋಗದ ಅಧ್ಯಕ್ಷೆ ಹಾಗೂ ಹೋರಾಟಗಾರರ ವಿರುದ್ಧ ಗಂಭೀರ ಆರೋಪ:ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರಕ್ಕೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. “1,510 ಎಂಬುದು ಕೇವಲ ಊಹಾಪೋಹದ ಸಂಖ್ಯೆಯಾಗಿದ್ದು, ಸರ್ಕಾರ ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಬೇಕು. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು.ಇದೇ ವೇಳೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಜಯಂತ್ ಟಿ. ಅವರ ವಿರುದ್ಧ ಗಂಭೀರ ಆರೋಪ ಮಾಡಿದ ಶ್ರೀನಿವಾಸ್ ರಾವ್, “ಇದೊಂದು ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಇದರಲ್ಲಿ ಯಾವುದೇ ಹುರುಳಿಲ್ಲ. ಇಂತಹ ಸುಳ್ಳು ಸುದ್ದಿಗಳಿಂದಾಗಿ ಇಡೀ ರಾಜ್ಯ ಹಾಗೂ ದೇಶದಲ್ಲಿ ಧರ್ಮಸ್ಥಳ ಕ್ಷೇತ್ರ ಮತ್ತು ಊರಿನ ಬಗ್ಗೆ ಅಪನಂಬಿಕೆ ಮೂಡುವಂತೆ ಮಾಡಲಾಗುತ್ತಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share News