canaratvnews

ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ: ಮಾಜಿ ಸಚಿವ ಬಿ. ರಮಾನಾಥ ರೈ ಭಾಗಿ

ಮಂಗಳೂರು: ಏಪ್ರಿಲ್ 14: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಮಂಗಳೂರಿನ ಮಲ್ಲಿಕಟ್ಟೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ ಅವರು, “ಕೇಂದ್ರ ಸರ್ಕಾರವು ಗ್ಯಾಸ್ ಬೆಲೆಯನ್ನು ಮನಬಂದಂತೆ ಏರಿಸುವ ಮೂಲಕ ಕೋಟ್ಯಂತರ ಭಾರತೀಯರನ್ನು ಸಂಕಷ್ಟಕ್ಕೆ ತಳ್ಳಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ, ಅದರ ಲಾಭವನ್ನು ಜನರಿಗೆ ನೀಡದೆ ಬೆಲೆ ಏರಿಕೆ ಮಾಡುತ್ತಿರುವುದು ಖಂಡನೀಯ. ಈ ಸರ್ಕಾರ ಕೇವಲ ಬಂಡವಾಳಶಾಹಿಗಳ ಪರವಾಗಿದ್ದು, ಸಾಮಾನ್ಯ ಜನರ ಬದುಕನ್ನು ಬೀದಿಗೆ ತಂದಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಹಾಗೂ ಖಾಲಿ ಸಿಲಿಂಡರ್‌ಗಳಿಗೆ ಹಾರ ಹಾಕಿ ಅಣಕು ಪ್ರದರ್ಶನ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದರು. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿರುವ ಬಿಜೆಪಿ ಸರ್ಕಾರದ ನೀತಿಗಳನ್ನು ಯುವ ಕಾಂಗ್ರೆಸ್ ತೀವ್ರವಾಗಿ ಟೀಕಿಸಿತು.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಕಾರ್ಯಕರ್ತರು ಖಾಲಿ ಸಿಲಿಂಡರ್‌ಗಳಿಗೆ ಹಾರ ಹಾಕಿ ಅಣಕು ಪ್ರದರ್ಶನ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರ ಪರವಾಗಿ ಯುವ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದು ಮುಖಂಡರು ಎಚ್ಚರಿಸಿದರು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಜಿಲ್ಲಾ ಉಪಾಧ್ಯಕ್ಷರಾದ ಬಶೀರ್, ಸುನೀತ್ ದೇಸಾಯಿ ಮುಖಂಡರಾದ ಫಾರೂಕ್ ಪೆರ್ನೆ. ಆಸೀಫ್ ಬಜಾಲ್, ಸಮರ್ಥ್ ಭಟ್, ಫೃಥ್ವಿರಾಜ್, ವೆಲ್ವಿನ್, ಚೇತನ್, ಮಹೇಶ್, ಪ್ರಜ್ವಲ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Share News
Exit mobile version